6
15,000 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹10,000 ಕೋಟಿ: ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು, ಸೆ.24: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಕರ್ನಾಟಕ ಸರ್ಕಾರವು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯಡಿ 15,000 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ₹10,000 ಕೋಟಿ ಮೀಸಲಿಡಲು ನಿರ್ಧರಿಸಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳ ಸಮತೋಲಿತ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಟ್ಟು ₹32,611 ಕೋಟಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಗ್ರಾಮೀಣ ಮೂಲಸೌಕರ್ಯ, ರಸ್ತೆ, ಡಿಜಿಟಲ್ ಮೂಲಸೌಕರ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದರಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಲಿದೆ. ಅಲ್ಲದೆ ಗ್ರಾಮಗಳಿಂದ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಸುಗಮ ಸಂಚಾರಕ್ಕೆ ನೆರವಾಗಲಿದೆ.
ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗಳು ಮತ್ತು ಚರಂಡಿ ನಿರ್ಮಾಣಕ್ಕಾಗಿ ₹6,000 ಕೋಟಿ ಮೀಸಲಿಡಲು ಸಚಿವ ಸಂಪುಟ ನಿರ್ಧರಿಸಿದೆ.
ಗ್ರಾಮೀಣ ಮೂಲಸೌಕರ್ಯ ಬಲಪಡಿಸುವ ಮೂಲಕ ರಾಜ್ಯದ ಎಲ್ಲ ಪ್ರದೇಶಗಳಿಗೂ ಸಮಾನ ಅಭಿವೃದ್ಧಿಯ ಅವಕಾಶ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ.